ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿಜೆಪಿ ಹಿರಿಯ ಮುಖಂಡ ಬಿ ಎಂ ಸುಕುಮಾರ್ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ. ಸೋಮವಾರ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ರಾಜ್ಯಸಭಾ ಸದಸ್ಯ ರಣದೀಪ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆಯ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಎಂ ಸುಕುಮಾರ್ ಶೆಟ್ಟಿ ಅವರಿಗೆ ಬಿಜೆಪಿ ಟಿಕೆಟ್ ನೀಡದೆ ಗುರುರಾಜ್ ಗಂಟಿಹೊಳೆಯವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿತ್ತು. ಇದರಿಂದ ಬೇಸರಗೊಂಡಿದ್ದ ಮಾಜಿ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ರಾಜಕೀಯವಾಗಿ ತಟಸ್ಥ ಧೋರಣೆ ಅನುಸರಿಸಿದ್ದರು.
ಇದೀಗ ಸೋಮವಾರ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕರನ್ನು ಭೇಟಿ ಮಾಡಿದ್ದು ಸುಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ. ಈ ಸಂದರ್ಭ ರಾಜ್ಯ ಕಾಂಗ್ರೆಸ್ ವಕ್ತಾರ ಸುಧೀರ್ ಮರೋಳಿ ಸೇರಿದಂತೆ ಹಲವು ರಾಜ್ಯ ನಾಯಕರು ಉಪಸ್ಥಿತರಿದ್ದರು. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಸುಕುಮಾರ್ ಶೆಟ್ಟಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.