ಕುಂದಾಪುರ ಮಿರರ್ ಸುದ್ದಿ…
ಬೈಂದೂರು: ಜನರು ಆಶಿರ್ವಾದ ಮಾಡಿದರೆ ಕ್ಷೇತ್ರವನ್ನು ಅಭಿವೃದ್ಧಿಪಥದಲ್ಲಿ ಕೊಡೊಯ್ಯುವ ಮಹತ್ವಾಕಾಂಕ್ಷೆಯಿದೆ. ಮುಖ್ಯಮಂತ್ರಿಗಳಾಗಿದ್ದಾಗ ತಂದೆ ಬಂಗಾರಪ್ಪನವರು ಅನುಷ್ಠಾನಕ್ಕೆ ತಂದ ಯೋಜನೆಗಳು ಇಂದಿಗೂ ಜ್ವಲಂತ. ಅವರು ಹಾಕಿಕೊಟ್ಟ ಅಭಿವೃದ್ಧಿ ಹಾದಿಯಲ್ಲಿಯೇ ಸಾಗುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರದಂದು ಬೈಂದೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಗೋಳಿಹೊಳೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಚಿವ ಮಧು ಬಂಗಾರಪ್ಪ ಮಾತನಾಡಿ, ಬಂಗಾರಪ್ಪ ಅಭಿಮಾನಿಗಳಲ್ಲಿ ನಾವು ಬಂಗಾರಪ್ಪರನ್ನು ಕಾಣುತ್ತಿದ್ದೇವೆ. ಇಂದಿಗೂ ಅವರನ್ನು ವಿರೋಧ ಪಕ್ಷದವರ ಸಹಿತ ಎಲ್ಲರೂ ನೆನಪಿಸಿಕೊಳ್ಳುತ್ತಾರೆ. ಸಂಸದರಾಗಿ ಇಲ್ಲಿನ ಜನರ ಸೇವೆ ಮಾಡಲು ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್ ಕಣಕ್ಕಿಳಿದಿದ್ದು ಅವರನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಲು ಪ್ರಬುದ್ಧ ಮತದಾರರ ಸಹಕಾರ ಬೇಕಿದೆ. ಸೇವಾ ಮನೋಭಾವನೆ ಚಿಂತನೆಯಿಂದ ನನ್ನ ಅಕ್ಕನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ ಎಂದರು.
ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಲೋಕಸಭಾ ಸದಸ್ಯರಾಗಿ ಆರಿಸಿಬಂದರೆ ಬೈಂದೂರು ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಮಹಾಪೂರಕ್ಕೆ ಹೋಗಲಿದೆ. ಮಹಿಳೆಯರಿಗೆ ಜನರ ನೋವು ಅರ್ಥ ಮಾಡಿಕೊಳ್ಳುವ ಶಕ್ತಿಯಿದೆ. ಹೀಗಾಗಿ ನಮ್ಮ ಅಭ್ಯರ್ಥಿ ಗೆಲುವು ಸಾಧಿಸುವುದರಲ್ಲಿ ಎರಡು ಮಾತಿಲ್ಲ. ರಾಜ್ಯ ಸರಕಾರದ ಗ್ಯಾರೆಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಪ್ರತಿಮನೆಗೂ ತಲುಪಿದೆ. ಸಾಮಾನ್ಯ ಜನರಿಗೆ ಬದುಕು ಕಟ್ಟಿಕೊಟ್ಟ ಮುಖ್ಯಮಂತ್ರಿಗಳಲ್ಲಿ ದೇವರಾಜ ಅರಸು, ಬಂಗಾರಪ್ಪ ಅವರ ದೂರದೃಷ್ಟಿ ಚಿಂತನೆ ಇಂದಿಗೂ ಜನರಿಗೆ ನೆನಪಿದೆ. ರಾಜ್ಯದ ಈಗಿನ ಸಿಎಂ ಸಿದ್ದರಾಮಯ್ಯ ಸಾಮಾನ್ಯ ಜನರಿಗೆ ನೀಡುತ್ತಿರುವ ಕೊಡುಗೆ ಅಪಾರ ಎಂದರು.
ಮಾಜಿ ಶಾಸಕರುಗಳಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ ಶೆಟ್ಟಿ, ಆಯನೂರು ಮಂಜುನಾಥ್, ನಟ ಶಿವರಾಜಕುಮಾರ್, ಮುಖಂಡರುಗಳಾದ ಜಿ. ಎ. ಬಾವ, ಎಸ್. ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕಾರ್ಯದರ್ಶಿ ಮೋಹನ್ ಪೂಜಾರಿ, ಭರತ್ ದೇವಾಡಿಗ, ಮಂಜುನಾಥ ಪೂಜಾರಿ, ಗಿರೀಶ್ ಪೂಜಾರಿ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಕೆಪಿಸಿಸಿ ಸದಸ್ಯ ರಘುರಾಮ ಶೆಟ್ಟಿ ಸ್ವಾಗತಿಸಿದರು. ಕಿರಣ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.