ತಕ್ಷಣವೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಸೂಚನೆ
ಕುಂದಾಪುರ ಮಿರರ್ ಸುದ್ದಿ…
ಬೈಂದೂರು: ಬೈಂದೂರಿನ ಪಡುವರಿಯ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು. ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸೂಚಿಸಿದ್ದಾರೆ.
ಈ ಪ್ರದೇಶಕ್ಕೆ ಈ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ಎಚ್ಚರಿಕೆ ಸೂಚನೆ ನೀಡಿರುವ ಜತೆಗೆ ದೂರನ್ನು ಕೊಟ್ಟಿದ್ದರು. ಈ ಬಗ್ಗೆ ಗಂಭೀರವಾಗಿ ಯೋಚಿಸಿ ಕ್ರಮಕ್ಕೆ ಸೂಚನೆಯನ್ನು ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ ಫಲ ಹೀಗಾಗುತ್ತಿದೆ.
ಸಂಬಂಧಪಟ್ಟವರ ಮೇಲೆ ಕ್ರಮ ಆಗಲಿ
ಗುಡ್ಡ ಜರಿದು ರಸ್ತೆ ಬ್ಲಾಕ್ ಆಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಈ ಹಿಂದೆಯೇ ದೂರು ನೀಡಿದ್ದರೂ ಯಾವುದೇ ಕ್ರಮ ಆಗಿಲ್ಲ. ಹೀಗಾಗಿ ಕಾಮಗಾರಿಗೆ ಸಂಬಂಧಪಟ್ಟವರು ಹಾಗೂ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಆಗಬೇಕು ಎಂದು ಶಾಸಕರು ಎಚ್ಚರಿಸಿದ್ದಾರೆ.
ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು ಹಲವೆಡೆ ಮಳೆ ಹಾನಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಸಾಗುವ ಒತ್ತಿನೆಣೆಯಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ದೊಂಬೆ ರಸ್ತೆಯನ್ನು ಅಧಿಕಾರಿಗಳು ಈ ಬಗೆಯಲ್ಲಿ ನಿರ್ಲಕ್ಷ್ಯ ಮಾಡಿವುದು ಯಾಕೆ ಎಂದು ಶಾಸಕರು ಪ್ರಶ್ನಿಸಿದ್ದಾರೆ.