ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಭಾರತವನ್ನು ಒಡೆದ ಕಾಂಗ್ರೆಸ್ ಪಕ್ಷಕ್ಕೆ ಭಾರತವನ್ನು ಜೋಡಿಸಲು ಎಂದಿಗೂ ಸಾಧ್ಯವಿಲ್ಲ. ಭಾರತವನ್ನು ಜೋಡಿಸಿದ್ದು ಪ್ರಧಾನಿ ನರೇಂದ್ರ ಮೋದಿಯವರು. ಕಾಂಗ್ರೆಸ್‌ನ ದೌರ್ಜನ್ಯದಿಂದ ಜನ ಬೇಸೆತ್ತುಕೊಂಡಿದ್ದಾರೆ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಕೂಡಾ ಕಾಂಗ್ರೆಸ್ ಪಕ್ಷವನ್ನು ಕಿತ್ತೇಸೆಯುವ ಸಂಕಲ್ಪ ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅಭಿಪ್ರಾಯ ಪಟ್ಟರು.
ಅವರು ಕೋಟೇಶ್ವರದ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷ ಕುಂದಾಪುರ ಮಂಡಲದ ವತಿಯಿಂದ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯ ಸಮಾರೋಪ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಲೋಕಸಭಾ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಜನತೆ ನಿರೀಕ್ಷೆಗೂ ಮೀರಿದ ಫಲಿತಾಂಶ ನೀಡಿದ್ದಾರೆ. ಕಾರ್ಯಕರ್ತರು ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಈ ಚುನಾವಣೆಯೇ ಸಾಕ್ಷಿಯಾಗಿತ್ತು. ನಿಮ್ಮ ಋಣ ನನ್ನ ಮೇಲಿದೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಅವರು ಅಭಿಪ್ರಾಯ ಪಟ್ಟರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ನಡ್ಡಾ ಮುಂತಾದ ವ್ಯಕ್ತಿಗಳ ಸಮೀಪದಲ್ಲಿ ನಾನು ಇರುತ್ತೇನೆ ಎಂದು ನಾನು ಊಹಿಸಿಯೇ ಇರಲಿಲ್ಲ. ಇದು ಮತದಾರರು ವಿಶ್ವಾಸವಿಟ್ಟು ನೀಡಿದ ತೀರ್ಪು. ಆಯುಷ್ಮಾನ್, ರೈಲ್ವೆ, ಹೆದ್ದಾರಿ ಮುಂತಾದ ಪ್ರಚಲಿತ ವಿಷಯಗಳು ನನ್ನ ಮುಂದಿದೆ. ಖಂಡಿತ ಶಕ್ತಿಮೀರಿ ಪ್ರಯತ್ನ ಮಾಡುತ್ತೇನೆ ಎಂದರು.
ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕುಂದಾಪುರ ಮಂಡಲದ ಅಧ್ಯಕ್ಷ ಸುರೇಶ ಶೆಟ್ಟಿ ಗೋಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ ಶೆಟ್ಟಿ ಕಾಡೂರು, ಜಿಲ್ಲಾ ಕಾರ್ಯದರ್ಶಿಗಳಾದ ಸದಾನಂದ ಬಳ್ಕೂರು, ಅನಿತಾ ಶ್ರೀಧರ, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ವಿಠಲ್ ಪೂಜಾರಿ ಐರೋಡಿ ಉಪಸ್ಥಿತರಿದ್ದರು.
ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್ ಸ್ವಾಗತಿಸಿದರು. ಅನುಸೂಯ, ರೂಪ ಪೈ ಸನ್ಮಾನ ಪತ್ರ ವಾಚಿಸಿದರು.ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರ್ವಹಿಸಿ, ಕಾರ್ಯದರ್ಶಿ ನೇತ್ರಾವತಿ ವಂದಿಸಿದರು.