ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಶಿವಮೊಗ್ಗ ಮತ್ತು ರಾಜ್ಯದ ಇತರ ಕಡೆಗಳಲ್ಲಿ ಸಿಇಟಿ ಪರೀಕ್ಷೆ ಬರೆಯುವ ಸಂದರ್ಭ ವಿಪ್ರ ಸಮುದಾಯದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಬಲವಂತವಾಗಿ ಜನಿವಾರ ತೆಗೆಸಿ ಸಿ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ನಿರ್ಬಂಧವನ್ನು ವಿಧಿಸಿ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿರುವುದನ್ನು ಖಂಡಿಸಿ ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಅಮಾಯಕರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ವತಿಯಿಂದ ಕುಂದಾಪುರ ಉಪವಿಭಾಗಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರಾದ ಸುಬ್ರಹ್ಮಣ್ಯ ಹೊಳ್ಳ, ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ದೈಹಿಕ ತಪಾಸಣೆ ಮಾಡುವ ಸೋಗಿನಲ್ಲಿ ವಿದ್ಯಾರ್ಥಿಗಳು ಹಾಕಿಕೊಂಡಿದ್ದ ಯಜ್ಯೋಪವಿತವನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳು ದುರುದ್ದೇಶಪೂರ್ವಕವಾಗಿ ಹಾಗೂ ವಿದ್ಯಾರ್ಥಿಗಳ ಇಚ್ಛೆಗೆ ವಿರುದ್ಧವಾಗಿ ಕತ್ತರಿಸಿರುವುದು ಖಂಡನೀಯ. ಜನಿವಾರವನ್ನು ಧರಿಸಿಕೊಂಡು ಬಂದರೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡುದಿಲ್ಲ ಎಂದು ಬೆದರಿಕೆಯೊಡ್ಡಿ ವಿದ್ಯಾರ್ಥಿಗಳಿಗೆ ಧಾರ್ಮಿಕವಾಗಿ ಹಾಗೂ ಮಾನಸಿಕವಗಿ ಘಾಸಿ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಪ್ರವೇಶ ನಿಯಮಗಳಲ್ಲಿ ಜನಿವಾರವನ್ನು ಧರಿಸಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರ್ಬಂಧ ಇಲ್ಲದಿದ್ದರೂ, ವೈಯಕ್ತಿಕ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಧಾರ್ಮಿಕ ಆಚರಣೆಯ ಸ್ವಾತಂತ್ರ್ಯವನ್ನು ಕಾನೂನು ಬಾಹಿರವಾಗಿ ಸಾರ್ವಜನಿಕವಾಗಿ ಧಕ್ಕೆ ಉಂಟುಮಾಡಿದ್ದು, ಅಧಿಕಾರಿಗಳ ಈ ಕೃತ್ಯದಿಂದ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಹಾಗೂ ಯಜ್ಯ್ನೋಪವಿತ ಧಾರಣೆಯ ನಂಬಿಕೆ ಉಳ್ಳಂತಹ ಸಾರ್ವಜನಿಕರ ಭಾವನೆಗಳಿಗೆ ತೀವ್ರವಾದ ಘಾಸಿ ಉಂಟು ಮಾಡಿದೆ. ಈ ಘಟನೆಯಿಂದ ಬ್ರಾಹ್ಮಣ ಸಮುದಾಯಕ್ಕೆ ಬಹಳ ನೋವು ಉಂಟಾಗಿದ್ದು, ಧಾರ್ಮಿಕ ಭಾವನೆಗಳಿಗೆ ಅವಮಾನ ಮಾಡಿದಂತಾಗಿದೆ. ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಹೇಳಿದರು.
ಜಮ್ಮು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿ ಖಂಡನೀಯ. ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ದೇಶಕ್ಕೆ ಒಂದು ಕಪ್ಪುಚುಕ್ಕೆಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸರಕಾರ ಎಚ್ಚರಿಕೆ ವಹಿಸಬೇಕು, ಅಮಾಯಕರ ಮೇಲೆ ದಾಳಿ ನಡೆಸಿ ಉಗ್ರರ ಹೆಡೆಮುರಿ ಕಟ್ಟಿ ಅವರಿಗೆ ಕಠಿಣ ಶಿಕ್ಷೆ ನೀಡಬೇಕು. ಹಿಂದುಗಳು ಒಂದಾಗಬೇಕು ಎಂದು ಅವರು ಹೇಳಿದರು.
ವಿಪ್ರವಾಣಿ ಸಂಪಾದಕ ಶಂಕರ ರಾವ್ ಕಾಳಾವರ ಮಾತನಾಡಿ, ಬ್ರಾಹ್ಮಣರ ಏಳಿಗೆಯನ್ನು ಸಹಿಸಲಾಗದೆ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದಂತೆ ನೋಡಿಕೊಳ್ಳುವ ದುರುದ್ದೇಶದಿಂದ ರಾಜ್ಯದ ಮೂರ್ನಾಲ್ಕು ಕಡೆಗಳಲ್ಲಿ ಜನಿವಾರವನ್ನು ತುಂಡು ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ. ಇದರಿಂದ ಇಡೀ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದಂತಾಗಿದ್ದು, ಈ ಘಟನೆಗೆ ಕಾರಣರಾದವರಿಗೆ ಸರಕಾರ ಕಠಿಣ ಶಿಕ್ಷೆ ನೀಡಬೇಕು. ಇಂತಹ ಘಟನೆಗಳು ನಡೆಯದಂತೆ ಮತ್ತು ಬ್ರಾಹ್ಮಣರಿಗೆ ಯಾವುದೇ ತೊಂದರೆಯಾಗದಂತೆ ಸರಕಾರ ಕ್ರಮಕೈಗೊಳ್ಳಬೇಕು. ಸರಕಾರ ಸ್ಪಂದಿಸದಿದ್ದಲ್ಲಿ ಮತ್ತು ಸರಿಯಾದ ಉತ್ತರ ದೊರೆಯದಿದ್ದಲ್ಲಿ ಬ್ರಾಹ್ಮಣ ಸಂಘಟನೆಗಳ ಮೂಲಕ ರಾಜ್ಯಾದ್ಯಂತ ವಿಶೇಷ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.
ಇದೇ ಸಂದರ್ಭ ಮನವಿಯನ್ನು ಪ್ರಭಾರ ತಹಶೀಲ್ದಾರ್ ಅವರಿಗೆ ಸಲ್ಲಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.
ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಕುಂದಾಪುರ ಅಧ್ಯಕ್ಷ ಎಸ್.ಕೃಷ್ಣಾನಂದ ಚಾತ್ರ, ಪ್ರಧಾನ ಕಾರ್ಯದರ್ಶಿ ವಾದಿರಾಜ ಹೆಬ್ಬಾರ್, ಯುವ ವಿಪ್ರ ವೇದಿಕೆ ಅಧ್ಯಕ್ಷೆ ಪವಿತ್ರ ಅಡಿಗ, ಮಹಿಳ ವೇದಿಕೆ ಅಧ್ಯಕ್ಷೆ ಭಾರ್ಗವಿ ಭಟ್ ಬೆಳ್ವೆ, ಯುವ ವೇದಿಕೆ ಅಧ್ಯಕ್ಷ ಕೇಶವ ಅಡಿಗ ಬಸ್ರೂರು, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್, ರಾಘವೇಂದ್ರ ಅಡಿಗ, ಸಂದೇಶ ಭಟ್ ಮೊದಲಾದವರು ಉಪಸ್ಥಿತರಿದ್ದರು.