ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕುಂದಾಪುರ ಕ್ಷೇತ್ರದಲ್ಲಿ ನಾಲ್ಕು ಜನ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಗಳಿದ್ದಾರೆ. ಆದರೆ ಕಾಂಗ್ರೆಸ್ ಗೆ ವ್ಯಕ್ತಿ ಮುಖ್ಯ ಅಲ್ಲ. ಹಾಗಾಗಿ ಪಕ್ಷದ ಹೈಕಮಾಂಡ್ ಯಾರನ್ನೇ ಆಯ್ಕೆ ಮಾಡಿದರೂ ನಾವು ಅವರ ಜೊತೆಗೆ ನಿಲ್ಲಬೇಕಿದೆ. ಆ ನಿಟ್ಟಿನಲ್ಲಿ ಯುದ್ಧಕ್ಕೆ ಮೊದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.
ಅವರು ಕುಂದಾಪುರ ತಾಲೂಕಿನ ತೆಕ್ಕಟ್ಟೆಯ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಹಮ್ಮಿಕೊಂಡ ಬೀಜಾಡಿ, ಗೋಪಾಡಿ, ಕುಂಭಾಶಿ, ತೆಕ್ಕಟ್ಟೆ, ಕೆದೂರು, ಬೇಳೂರು, ಕಾಳಾವರ, ಕೊರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಸ್ಥಳೀಯಾಡಳಿತ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಮುಂಬರುವ ಚುನಾವಣೆಗೆ ಈಗಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕಿದೆ ಎಂದ ಅವರು, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೂತ್ ಮಟ್ಟದ ನಾಯಕರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ತನ್ನ ವ್ಯಾಪ್ತಿಯ ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಬೇಕು ಎಂದರು. ಬೂತ್ ಮಟ್ಟದಲ್ಲಿ ಸಮಿತಿಗಳನ್ನು ಈಗಲೇ ರಚನೆ ಮಾಡಿಕೊಂಡು ಪಕ್ಷ ಟಿಕೆಟ್ ನೀಡಿದ ಅಭ್ಯರ್ಥಿಗೆ ಮಾಹಿತಿಗಳನ್ನು ನೀಡುವ ಕೆಲಸ ಮಾಡಬೇಕು. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಸ್ಥಳೀಯ ಸಮಿತಿಗಳು ಕ್ರಿಯಾಶೀಲವಾಗಬೇಕು. ಕಾಂಗ್ರೆಸ್ ಸರ್ಕಾರ ಇದ್ದಾಗ ಮಾಡಿದ ಸಾಧನೆಗಳನ್ನು ಈಗಿನಿಂದಲೇ ಮತದಾರರಿಗೆ ಮನವರಿಕೆ ಮಾಡುವ ಕೆಲಸ ಮಾಡಬೇಕು ಎಂದು ಹೇಳಿದರು.
ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ದಿನೇಶ್ ಹೆಗ್ಡೆ, ಕಿಶನ್ ಕೊಳ್ಕೆಬೈಲು, ಪ್ರಸನ್ನ ಕೆರಾಡಿ, ಶ್ಯಾಮಲ ಭಂಡಾರಿ, ಮಮತಾ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.